ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ–2020 ಅನುಷ್ಠಾನಕ್ಕೆ ರಾಜ್ಯದ ಮಾನ್ಯ ಉನ್ನತ ಶಿಕ್ಷಣ ಸಚಿವರು, ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಹಕುಲಾಧಿಪತಿಗಳೂ ಆದ ಡಾ. ಅಶ್ವಥ್ ನಾರಾಯಣ ಸಿ.ಎನ್ ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ದಿನಾಂಕ 30.08.2021 (ಸೋಮವಾರ) ರಂದು ಮಧ್ಯಾಹ್ನ 12.00 ಗಂಟೆಗೆ ದೀಪ ಬೆಳಗುವ ಮೂಲಕ ಚಾಲನೆ ನೀಡಲಿದ್ದಾರೆ.
ಇದೇ ಸಂದರ್ಭದಲ್ಲಿ ಸಚಿವರು ಮೂಡಬಿದ್ರೆಯ, ಬನ್ನಡ್ಕದಲ್ಲಿ ಹೊಸದಾಗಿ ಸ್ಥಾಪಿಸಲಾಗುತ್ತಿರುವ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜನ್ನು ಸಾಂಕೇತಿಕವಾಗಿ ಉದ್ಘಾಟಿಸಲಿರುವರು. ನಿಟ್ಟೆ ವಿಶ್ವವಿದ್ಯಾನಿಲಯದ ಕುಲಾಧಿಪತಿ ಡಾ. ಎನ್ ವಿನಯ್ ಹೆಗ್ಡೆ ಶುಭಾಶಂಸನೆಗೈಯಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯ ಮಾನ್ಯ ಕುಲಪತಿ ಪ್ರೊ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು.
ಇದೇ ದಿನ ಬೆಳಿಗ್ಗೆ 10.00 ಗಂಟೆಯಿಂದ 11.45ರವರೆಗೆ ರಾಷ್ಟ್ರೀಯ ಶಿಕ್ಷಣ ನೀತಿ–2020ರ ಬಗ್ಗೆ ಅರಿವು ಮೂಡಿಸಲು, ಕಾರ್ಯಾಗಾರ ಆಯೋಜಿಸಲಾಗಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಬೆಂಗಳೂರು ಇದರ ಉಪಾಧ್ಯಕ್ಷ ಪ್ರೊ. ಬಿ. ತಿಮ್ಮೇಗೌಡ ದಿಕ್ಸೂಚಿ ಭಾಷಣ ಮಾಡಲಿರುವರು. ಸದರಿ ಕಾರ್ಯಾಗಾರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಡೀನರುಗಳು, ಸ್ನಾತಕೋತ್ತರ ವಿಭಾಗಗಳ ಅಧ್ಯಕ್ಷರುಗಳು, ಅಧ್ಯಯನ ಮಂಡಳಿ ಅಧ್ಯಕ್ಷರುಗಳು, ಸಂಯೋಜಿತ/ಸ್ವಾಯತ್ತ/ಘಟಕ ಕಾಲೇಜುಗಳ ಪ್ರಾಂಶುಪಾಲರುಗಳು ಮತ್ತು ವಿದ್ಯಾರ್ಥಿ ಪ್ರತಿನಿಧಿಗಳು (Online/Offline) ಭಾಗವಹಿಸಲಿರುವರು.
ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಸರ್ಕಾರದ Covid -19 ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಜಾಲತಾಣದಲ್ಲಿ ಪ್ರಕಟಿಸಲಾದ ಕೊಂಡಿ (WebEx Meeting: Meeting Number: 2557 037 6873 Meeting Password: 2021) ಬಳಸಿಕೊಂಡು ಕಾರ್ಯಕ್ರಮದಲ್ಲಿ ಆನಲೈನ್ ಮೂಲಕವೂ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ, ಎಂದು ಕುಲಸಚಿವ ಪ್ರೊ. ಕಿಶೋರ್ ಕುಮಾರ್ ಸಿ ಕೆ ತಿಳಿಸಿದ್ದಾರೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق