ಬಪ್ಪಳಿಗೆಯ ಅಂಬಿಕಾ ಪದವಿ ಕಾಲೇಜಿನಲ್ಲಿ ಶಿಕ್ಷಕ ತರಬೇತಿ ಕಾರ್ಯಕ್ರಮ
ಪುತ್ತೂರು: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕಿದೆ. ಸಣ್ಣ ತರಗತಿಯಿಂದಲೇ ಅಂತಹ ಕಾರ್ಯ ಆರಂಭಗೊಂಡರೆ ಪಿಯು ಅಥವಾ ಪದವಿ ಹಂತಕ್ಕೆ ಬರುವ ವೇಳೆಗೆ ವಿದ್ಯಾರ್ಥಿಗಳಲ್ಲಿ ಅತ್ಯುತ್ತಮ ಸಾಮರ್ಥ್ಯಗಳು ಒಡಮೂಡಿಕೊಳ್ಳುತ್ತವೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗಾಗಿ ಆಯೋಜಿಸಲಾದ ‘ಶಿಕ್ಷಕ ತರಬೇತಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಸೋಮವಾರ ಮಾತನಾಡಿದರು.
ಎಲ್ಲರೂ ಒಟ್ಟಾಗಿ ಕಾರ್ಯ ನಿರ್ವಹಿಸುವುದರಿಂದ ಸಂಸ್ಥೆ ಬೇಗನೆ ಅಭಿವೃದ್ಧಿ ಹೊಂದುವುದಕ್ಕೆ ಸಾಧ್ಯ. ಅಂಬಿಕಾ ಸಂಸ್ಥೆಗಳಲ್ಲಿ ಪರಿವರ್ತನೆಯ ಯುಗ ಆರಂಭಗೊಂಡು ವೇಗವಾಗಿ ಮುನ್ನಡೆಯಲಾರಂಭಿಸಿದೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪಠ್ಯ ವಿಚಾರಗಳೊಂದಿಗೆ ಬೇರೆ ಯಾವ ಯಾವ ಪಠ್ಯೇತರ ಕಾರ್ಯಕ್ರಮಗಳನ್ನು, ವಿಚಾರಗಳನ್ನು ಒದಗಿಸಿಕೊಡಬೇಕೆಂದು ಸಂಸ್ಥೆಯ ಪ್ರಾಚಾರ್ಯರು ಹಾಗೂ ಶಿಕ್ಷಕರು ನಿರ್ಧರಿಸಬೇಕು. ವಿದ್ಯಾರ್ಥಿಯೊಬ್ಬನ ಸರ್ವತೋಮುಖ ಬೆಳವಣಿಗೆಗೆ ಬೇಕಾದ ಎಲ್ಲಾ ವಿಚಾರಗಳು ಶಿಕ್ಷಣ ಸಂಸ್ಥೆಯಲ್ಲಿ ದೊರೆಯುವಂತಾಗಬೇಕು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅಂಬಿಕಾ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ವಿನಾಯಕ ಭಟ್ಟ ಗಾಳಿಮನೆ ಮಾತನಾಡಿ ಶಿಕ್ಷಣ ಸಂಸ್ಥೆಗಳು ಸುಲಲಿತವಾಗಿ ಕಾರ್ಯ ನಿರ್ವಹಿಸುವುದಕ್ಕೆ ವಿವಿಧ ಸಮಿತಿಗಳ ಅಗತ್ಯವಿದೆ. ಪ್ರತಿಯೊಂದು ಸಮಿತಿಯೂ ತನ್ನ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳನ್ನು ರೂಪಿಸಿದಾಗ ಸಂಸ್ಥೆ ಬೆಳವಣಿಗೆ ಹೊಂದುತ್ತದೆ. ಕೆಲವೊಂದು ಸಮಿತಿಗಳನ್ನು ಶಿಕ್ಷಣ ವ್ಯವಸ್ಥೆಯಲ್ಲಿ ಕಡ್ಡಾಯಗೊಳಿಸಲಾಗಿದೆ ಎಂಬುದೂ ಗಮನಾರ್ಹ. ಸಂಸ್ಥೆಗೆ ದಾಖಲಾತಿ ಹೊಂದಿದ ಪ್ರತಿಯೊಬ್ಬರಿಗೂ ನ್ಯಾಯ ಒದಗಿಸುವುದು ಶಿಕ್ಷಕರ ಕರ್ತವ್ಯ ಎಂದು ನುಡಿದರು.
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ ಸ್ವಾಗತಿಸಿ, ಅಂಬಿಕಾ ಪದವಿ ಮಹಾವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಅಕ್ಷಯ್ ಹೆಗಡೆ ವಂದಿಸಿದರು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಅಭಿಷೇಕ್ ಕಾರ್ಯಕ್ರಮ ನಿರ್ವಹಿಸಿದರು. ಸಭಾ ಕಾರ್ಯಕ್ರಮದ ನಂತರ ಮಾಹಿತಿ ಕಾರ್ಯಾಗಾರ ನಡೆಯಿತು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿ ರಾಕೇಶ್ ಕುಮಾರ್ ಕಮ್ಮಜೆ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment