ಚಿಕ್ಕಮಗಳೂರು: ತಾಲ್ಲೂಕಿನ ಹರಿಹರದಹಳ್ಳಿ ಗ್ರಾಮ ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳು ಆಗಮಿಸದೇ ಬೇಜವಾಬ್ದಾರಿತನ ತೋರಿರುವ ಹಿನ್ನೆಲೆಯಲ್ಲಿ ಗ್ರಾ.ಪಂ. ಸಭೆಯನ್ನು ಮುಂದಿನ ದಿನಾಂಕ ನಿಗದಿಗೊಳಿಸಿ ನಡೆಸಲಾಗುವುದು ಎಂದು ಗ್ರಾ.ಪಂ. ಅಧ್ಯಕ್ಷ ಹೆಚ್.ಜೆ.ಯಶ್ವಂತರಾಜು ಹೇಳಿದರು.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇಂದಿನ ಸಭೆಯಲ್ಲಿ ಗೈರಾದ ಅಧಿಕಾರಿಗಳನ್ನು ನೋಡಿದರೆ ಗ್ರಾಮ ಪಂಚಾಯಿತಿ ಸಭೆಗಳಲ್ಲಿ ಭಾಗವಹಿಸುವ ಆಸಕ್ತಿಯೇ ಇಲ್ಲದಂತೆ ಕಾಣುತ್ತಿದೆ ಎಂದರು.
ಗ್ರಾ.ಪಂ.ನ ಕೆಡಿಪಿ ಸಭೆಯಲ್ಲಿ ಗೈರಾದ ಅಧಿಕಾರಿಗಳ ವಿರುದ್ಧ ಸರ್ಕಾರದ ಮೇಲ್ಪಟ್ಟ ಅಧಿಕಾರಿಗಳ ಗಮನಕ್ಕೂ ತರಲಾಗುವುದು. ಜೊತೆಗೆ ಉನ್ನತ ಮಟ್ಟದ ಅಧಿಕಾರಿಗಳು ಈ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃಧ್ದಿ ಇಲಾಖೆ, ಅಂಗನವಾಡಿ, ಕಾರ್ಯಕರ್ತರು, ಸಾಮಾಜಿಕ ಅರಣ್ಯ ಇಲಾಖೆ, ಗ್ರಾ.ಪಂ. ಗ್ರಂಥಾಲಯ ಮೇಲ್ವಿಚಾರಕರು, ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಹೊರತುಪಡಿಸಿದರೆ ಇನ್ಯಾವುದೇ ಅಧಿಕಾರಿಗಳ ತಂಡ ಆಗಮಿಸಿಲ್ಲ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷರು, ಸದಸ್ಯರು ಹಾಗೂ ಪಂಚಾಯಿತಿ ಅಭಿವೃಧ್ದಿ ಅಧಿಕಾರಿ ಪಿ.ಲಕ್ಷ್ಮಣ್ ಹಾಜರಿದ್ದರು.
إرسال تعليق