ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹಿರಿಯ ಸಾಹಿತಿ ಡಾ. ಚಂದ್ರಶೇಖರ ಪಾಟೀಲ್ (ಚಂಪಾ) ನಿಧನ

ಹಿರಿಯ ಸಾಹಿತಿ ಡಾ. ಚಂದ್ರಶೇಖರ ಪಾಟೀಲ್ (ಚಂಪಾ) ನಿಧನ


ಚಂದ್ರಶೇಖರ ಪಾಟೀಲ್ ಕನ್ನಡ ನಾಡಿನ ಕವಿ, ನಾಟಕಕಾರ, ಸಂಘಟನಕಾರ, ಪತ್ರಿಕಾ ಸಂಪಾದಕ, ಆಡಳಿತಗಾರ, ಕನ್ನಡ ಹೋರಾಟಗಾರ ಹೀಗೆ ಬಹುಮುಖ ವ್ಯಕ್ತಿತ್ವದಿಂದ ಪ್ರಸಿದ್ಧರಾಗಿದ್ದರು.


ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ.ಚಂದ್ರಶೇಖರ ಪಾಟೀಲ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗಿನ ಜಾವ ವಿಧಿವಶರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.


ಚಂದ್ರಶೇಖರ್ ಪಾಟೀಲ್ ಕನ್ನಡ ನಾಡಿನ ಕವಿ, ನಾಟಕಕಾರ, ಸಂಘಟನಕಾರ, ಪತ್ರಿಕಾ ಸಂಪಾದಕ, ಆಡಳಿತಗಾರ, ಕನ್ನಡ ಹೋರಾಟಗಾರ ಹೀಗೆ ಬಹುಮುಖ ವ್ಯಕ್ತಿತ್ವದಿಂದ ಪ್ರಸಿದ್ಧರಾಗಿದ್ದರು. ಕೆಲವು ದಿನಗಳಿಂದ ಚಂಪಾ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಚಂಪಾ ಸಂಕ್ರಮಣ ಪತ್ರಿಕೆಯ ಸಂಪಾದಕರಾಗಿದ್ದರು. ಪುಸ್ತಕ ಸಂತೆ, ಗಡಿನಾಡು ಕನ್ನಡಿಗರ ಪರವಾಗಿ ಚಂಪಾ ಅವರು ಹೋರಾಟ ನಡೆಸಿದ್ದರು.


1939 ಜೂನ್ 18ರಂದು ಚಂಪಾ ಅವರು ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹತ್ತಮುತ್ತೂರಿನಲ್ಲಿ ಜನಿಸಿದ್ದರು. ತಂದೆ ಬಸವರಾಜ್ ಹಿರೇಗೌಡರು, ತಾಯಿ ಮುರಿಗೆವ್ವ. ಚಂದ್ರಶೇಖರ್ ಪಾಟೀಲರು ಸಾಹಿತ್ಯ ಲೋಕದಲ್ಲಿ ಚಂಪಾ ಎಂಬ ಹೆಸರಿನಿಂದ ಪ್ರಖ್ಯಾತರು. ಪಾಟೀಲರ ಪ್ರಾರಂಭಿಕ ಶಿಕ್ಷಣ ಹಾವೇರಿಯಲ್ಲಿ ಮತ್ತು ಪ್ರೌಢಶಿಕ್ಷಣ ಧಾರವಾಡದಲ್ಲಿ ನೆರವೇರಿತು. ತಮ್ಮ ತಂದೆಯವರ ಇಂಗ್ಲಿಷ್‌ ಅಭಿಮಾನದಿಂದ ಪ್ರೇರಿತರಾಗಿ ಇಂಗ್ಲಿಷ್ ಎಂ.ಎ. ಪದವಿ ಗಳಿಸಿದರು.


ಇಂಗ್ಲೆಂಡಿನ ಲೀಡ್ಸ್‌ ವಿಶ್ವವಿದ್ಯಾಲಯದಿಂದ ಪದವಿ:

ಇದಲ್ಲದೆ ಬ್ರಿಟಿಷ್‌ ಕೌನ್ಸಿಲ್‌ ವಿದ್ಯಾರ್ಥಿ ವೇತನ ಪಡೆದು ಇಂಗ್ಲೆಂಡಿನ ಲೀಡ್ಸ್‌ ವಿಶ್ವವಿದ್ಯಾಲಯದಿಂದ ಭಾಷಾಶಾಸ್ತ್ರದಲ್ಲಿನ ಸ್ನಾತಕೋತ್ತರ ಪದವಿ ಮತ್ತು ಹೈದರಾಬಾದಿನ ಕೇಂದ್ರೀಯ ಇಂಗ್ಲಿಷ್‌ ಸಂಸ್ಥೆಯಿಂದ ಇಂಗ್ಲಿಷ್‌ ಅಧ್ಯಯನದ ಡಿಪ್ಲೊಮಾ ಪಡೆದರು. ಶಿಕ್ಷಣದ ಪ್ರತಿ ಹಂತದಲ್ಲಿಯೂ ಆಗ್ರ ಶ್ರೇಯಾಂಕ ಗಳಿಸಿದ ಕೀರ್ತಿ ಅವರದ್ದಾಗಿತ್ತು.


ಇಂಗ್ಲಿಷ್‌ ಉಪನ್ಯಾಸಕರಾಗಿ ವೃತ್ತಿ ಆರಂಭ:


ಚಂದ್ರಶೇಖರ ಪಾಟೀಲರು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್‌ ಉಪನ್ಯಾಸಕರಾಗಿ ಬೋಧಕ ವೃತ್ತಿ ಆರಂಭಿಸಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಲೇ ತಮ್ಮ ಕಾವ್ಯ ಹಾಗೂ ನಾಟಕಗಳ ಮೂಲಕ ಪ್ರಸಿದ್ಧರಾಗುತ್ತಾ ಬಂದರು. ಧಾರವಾಡದ ಕಾಲೇಜಿಗೆ ಬಂದಾಗ ಪ್ರಿನ್ಸಿಪಾಲರಾಗಿದ್ದ ವಿ.ಕೃ. ಗೋಕಾಕರು ನವ್ಯಕಾವ್ಯ ನಿರ್ಮಿತಿಯ ನೇತಾರರಲ್ಲೊಬ್ಬರಾಗಿದ್ದು, ಇವರ ಪ್ರಭಾವಕ್ಕೆ ಒಳಗಾಗಿ ಕವನಗಳನ್ನೂ ಬರೆಯತೊಡಗಿ, ಅವುಗಳಲ್ಲಿ ಹಲವಾರು ಕವನಗಳು ‘ಪ್ರಪಂಚ’ ಪತ್ರಿಕೆಯಲ್ಲಿ ಪ್ರಕಟಗೊಂಡವು. ಕಾವ್ಯದಲ್ಲಿ ಬೆಳೆದ ಆಸಕ್ತಿಯಿಂದ, ಹಲವಾರು ಮಂದಿ ಉದಯೋನ್ಮುಖರು ಸೇರಿ ‘ಕಮಲ ಮಂಡಲ’ ಎಂಬ ಸಂಸ್ಥೆಯನ್ನು ಹುಟ್ಟುಹಾಕಿದರು.


ಚಂಪಾ ಇವರ ಸಂಪಾದಿತ ಕೃತಿಗಳೆಂದರೆ ಸಂಕ್ರಮಣ ಕಾವ್ಯ, ಗಾಂಧಿ ಗಾಂಧಿ, ಜೂನ್‌ 75-ಮಾರ್ಚ್ 77, ಬಂಡಾಯ ಮತ್ತು ಸಾಹಿತ್ಯ, ನೆಲ್ಸನ್‌ ಮಂಡೇಲಾ, ಕನ್ನಡನಾಡಿಗೊಂದು ಪ್ರಾದೇಶಿಕ ಪಕ್ಷ, ಸಂಕ್ರಮಣ ಸಾಹಿತ್ಯ (3 ಸಂಪುಟ), ಗಾಂಧಿ ಎನ್ನುವ ಹೆಸರು ಮುಂತಾದವುಗಳು. ಪಾಟೀಲರ ಇತರ ಕೃತಿಗಳೆಂದರೆ ಬೇಂದ್ರೆ-ನಾ ಕಂಡಂತೆ, ನನಗೆ ಕಂಡಷ್ಟು, ೨೬ ದಿನ ೨೫ ರಾತ್ರಿ, ಕನ್ನಡ ಕನ್ನಡ ಬರ್ರಿ‍ ನಮ್ಮ ಸಂಗಡ ಮತ್ತು ಇಂಗ್ಲಿಷ್‌ನಲ್ಲಿ ರಚಿಸಿದ ಕೃತಿ AT THE OTHER END ಮುಂತಾದವು.


ಮುಖ್ಯಮಂತ್ರಿ ಸಂತಾಪ:

ಹಿರಿಯ ಸಾಹಿತಿ, ವಿಮರ್ಶಕ, ನಾಟಕಕಾರ, ಕನ್ನಡಪರ ಹೋರಾಟಗಾರ ಪ್ರೊ. ಚಂದ್ರಶೇಖರ್ ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


ಚಂಪಾ ಎಂದೇ ಪ್ರಸಿದ್ಧರಾದ ಅವರು, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ನಾಡು-ನುಡಿಗೆ ಅಪಾರ ಸೇವೆ ಸಲ್ಲಿಸಿದ್ದಾರೆ.


ಗೋಕಾಕ್ ಚಳವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು. ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ, ಅಭಿಮಾನಿಗಳು ಮತ್ತು ಶಿಷ್ಯರಿಗೆ ಆ ದೇವರು ಕರುಣಿಸಲಿ ಎಂದು ಮುಖ್ಯಮಂತ್ರಿಗಳು ಸಂತಾಪ ವ್ಯಕ್ತ ಪಡಿಸಿದ್ದಾರೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post