ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಸಿಐಡಿ ಅಧಿಕಾರಿಗಳು ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ರಚನಾ ಹನುಮಂತ ಅವರನ್ನು ಬಂಧಿಸಿದ್ದಾರೆ.
545 ಪಿಎಸ್ಐ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 17ನೇ ಆರೋಪಿಯಾಗಿರುವ ರಚನಾ ಹನುಮಂತಳನ್ನು ಸಿಐಡಿ (CID) ವಿಶೇಷ ತನಿಖಾ ತಂಡ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ವಶಕ್ಕೆ ಪಡೆದಿದೆ.
ನೇಮಕಾತಿಯ ಮಹಿಳಾ ವಿಭಾಗದಲ್ಲಿ ರಾಜ್ಯಕ್ಕೆ ರಚನಾ ಹನುಮಂತ ಮೊದಲ ರ‍್ಯಾಂಕ್ ಪಡೆದಿದ್ದರು. ಅಕ್ರಮ ಪ್ರಕರಣ ಬಯಲಾಗುತ್ತಿದ್ದಂತೆ ರಚನಾ ಮೂರು ತಿಂಗಳಿನಿಂದ ನಾಪತ್ತೆಯಾಗಿದ್ದರು.
ಕಳೆದ ಮೂರುವರೆ ತಿಂಗಳಿಂದ ಪೊಲೀಸರ ಕಣ್ಣುತಪ್ಪಿಸಿ ತಿರುಗಾಡುತ್ತಿದ್ದ ರಚನಾ ಒಂದೆಡೆ ನೆಲೆ ನಿಲ್ಲದೇ ಹಲವು ಕಡೆ ವಾಸ್ತವ್ಯ ಬದಲಾಯಿಸಿದ್ದರು.
ಈಕೆಗಾಗಿ ಬೆಂಗಳೂರು, ಕಲಬುರಗಿ ಸಿಐಡಿ ಅಧಿಕಾರಿಗಳು ನಿರಂತರವಾಗಿ ಹುಡುಕಾಟ ನಡೆಸಿದ್ದರು. ಮಹಾರಾಷ್ಟ್ರ ಗಡಿಯಲ್ಲಿರುವ ಜಿಲ್ಲೆಯ ಆಳಂದ ತಾಲ್ಲೂಕಿನ ಹಿರೋಳ್ಳಿ ಚೆಕ್‌ಪೋಸ್ಟ್ ಬಳಿ ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲ ಹಾಗೂ ಸಿಐಡಿ ಡಿಟೆಕ್ಟಿವ್ ಸಬ್ ಇನ್‌ಸ್ಪೆಕ್ಟರ್ ಬಸವರಾಜ ನೇತೃತ್ವದ ತಂಡವು ರಚನಾರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು.
ಇದೀಗ ಶನಿವಾರ ನಗರದ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ದಸ್ತಗೀರಸಾಬ್ ಮುಲ್ಲಾ ಅವರ ಎದುರು ಆರೋಪಿಯನ್ನು ಹಾಜರುಪಡಿಸಲಾಯಿತು. ರಚನಾ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಾಗಿದ್ದರಿಂದ ಟ್ರಾನ್ಸಿಟ್ ವಾರೆಂಟ್ ಪಡೆದ ಸಿಐಡಿ ಅಧಿಕಾರಿಗಳು ಶನಿವಾರ ಸಂಜೆ ಬೆಂಗಳೂರಿಗೆ ಕರೆದೊಯ್ದರು.
ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿಯ ರಚನಾ ಪಿಎಸ್‌ಐ ಅಕ್ರಮ ನಡೆದ ಆರೋಪ ಕೇಳಿ ಬಂದಾಗ ಸರ್ಕಾರ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಕ್ರಮ ಖಂಡಿಸಿ ಅಭ್ಯರ್ಥಿಗಳು ನಡೆಸಿದ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದರು. ತನ್ನ ವಿರುದ್ಧ ಎಫ್‌ಐಆರ್ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದರು.
ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ರಚನಾ ಹೆಸರು ಕೇಳಿ ಬಂದಿತ್ತು. ಸಿಐಡಿ ತನಿಖೆಯಲ್ಲಿ ರಚನಾ 30 ಲಕ್ಷ ನೀಡಿದ್ದರೆಂಬ ಮಾಹಿತಿ ಬಹಿರಂಗವಾಗಿತ್ತು. ಈ ಬಗ್ಗೆ 22 ಅಭ್ಯರ್ಥಿಗಳ ವಿರುದ್ಧ ಸಿಐಡಿ ಡಿವೈಎಸ್ಪಿ ನರಸಿಂಹಮೂರ್ತಿ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನನ್ವಯ ಪ್ರಕರಣ ದಾಖಲಾಗಿತ್ತು. ರಚನಾ ಸರ್ಕಾರದ ಮರು ಪರೀಕ್ಷಾ ಆದೇಶದ ವಿರುದ್ಧದ ಪ್ರತಿಭಟನೆಯಲ್ಲಿಯೂ ಭಾಗಿಯಾಗಿದ್ದಳು.
ರಚನಾ ಎಫ್‌ಐಆರ್ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿದ್ದಳು. ಇದೀಗ ಕಾರ್ಯಾಚರಣೆ ನಡೆಸಿರುವ ಅಧಿಕಾರಿಗಳು ರಚನಾರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Post a Comment