ಶ್ರವಣಬೆಳಗೊಳ: ಶ್ರವಣಬೆಳಗೊಳದ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (75) ಇಂದು ವಿಧಿವಶರಾದರು. ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಬೆಳ್ಳೂರು ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ವಿಧಿವಶರಾಗಿದ್ದಾರೆ.
ಅನಾರೋಗ್ಯದ ಹಿನ್ನೆಲೆ ಅವರನ್ನು ಆಂಬುಲೆನ್ಸ್ ಮೂಲಕ ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಬೆಳ್ಳೂರು ಆಸ್ಪತ್ರೆಗೆ ಭೇಟಿ ನೀಡಿದರು.
ಶ್ರೀಗಳ ಶಿಷ್ಯರಾದ ಹೊಂಬುಜ ಮಠ, ಕನಕಗಿರಿ ಕ್ಷೇತ್ರ, ಸೋಂದಾ ಕ್ಷೇತ್ರ, ಕಂಬದಹಳ್ಳಿ ಕ್ಷೇತ್ರ, ತಮಿಳುನಾಡಿನ ಅರಹಂತಗಿರಿ, ಮೂಡುಬಿದಿರೆಯ ಜೈನ ಮಠ, ಕಾರ್ಕಳದ ಜೈನ ಮಠ ಪೀಠಾಧಿಪತಿಗಳು ಕ್ಷೇತ್ರಕ್ಕೆ ಆಗಮಿಸಿದ್ದು ದಿಗಂಬರ ಜೈನ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನ ನೆರವೇರಿಸಲಾಯಿತು ಎಂದು ಮಠದ ಮೂಲಗಳು ತಿಳಿಸಿವೆ.
ಶ್ರೀಗಳ ಪರಿಚಯ: ಶ್ರವಣಬೆಳಗೊಳದ ದಿಗಂಬರ ಜೈನ ಮಠದ ಸ್ವಾಮೀಜಿ 1949 ರ ಮೇ 3 ರಂದು ಜನಿಸಿದ್ದರು. 20ನೇ ವಯಸ್ಸಿನಲ್ಲಿ- 1970ರಲ್ಲಿ ಧರ್ಮಾಚಾರ್ಯ ಪೀಠವನ್ನು ಏರಿದ್ದರು. ಅವರ ಪೂರ್ವಾಶ್ರಮದ ಹೆಸರು ರತ್ನಾಕರ. ಅವರ ಹುಟ್ಟೂರು ಕಾರ್ಕಳ ತಾಲ್ಲೂಕಿನ ವರಂಗ.
ಶ್ರೀಗಳ ಶಿಕ್ಷಣ ಕೇವಲ ಜೈನ ಧರ್ಮಶಾಸ್ತ್ರಕ್ಕೆ ಸೀಮಿತವಾಗಿರಲಿಲ್ಲ. ಅವರು ಇತಿಹಾಸ ತಜ್ಞರು, ತತ್ವಜ್ಞಾನಿಗಳು, ಶ್ರೇಷ್ಠ ವಾಗ್ಮಿಗಳೂ ಆಗಿದ್ದರು. ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. ಇತಿಹಾಸ, ಬೆಂಗಳೂರು ವಿವಿಯಿಂದ ಎಂ.ಎ ತತ್ವಶಾಸ್ತ್ರ ಸ್ನಾತಕೋತ್ತರ ಪದವಿ ಪಡೆದಿದ್ದ ಅವರು, ಕನ್ನಡ, ಸಂಸ್ಕೃತ ಮತ್ತು ಪ್ರಾಕೃತದಲ್ಲೂ ಸ್ನಾತಕೋತ್ತರ ಪದವಿ ಪಡೆದಿದ್ದರು.
ಪೀಠದಲ್ಲಿ ಇದ್ದುಕೊಂಡೇ ಮಠದ ಸಮಸ್ತ ಕಾರ್ಯನಿರ್ವಹಣೆಯೊಂದಿಗೆ ಸಂಶೋಧನೆ, ಗ್ರಂಥ ರಚನೆಯಲ್ಲಿ ಕ್ರಿಯಾಶೀಲರಾಗಿದ್ದರು. 1981ರಲ್ಲಿ ಗೊಮ್ಮಟೇಶ್ವರ ಸಹಸ್ರಾಬ್ಧಿ ಮಹಾಮಸ್ತಕಾಭಿಷೇಕವನ್ನು ಯಶಸ್ವಿಯಾಗಿ ನೆರವೇರಿಸಿದ್ದರು. ಇದನ್ನು ಮೆಚ್ಚಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಕರ್ಮಯೋಗಿ ಎಂಬ ಬಿರುದು ನೀಡಿ ಗೌರವಿಸಿದ್ದರು.
40ಕ್ಕೂ ಹೆಚ್ಚು ಜಿನಾಲಯಗಳನ್ನು ಜೀರ್ಣೋದ್ಧಾರಗೊಳಿಸಿ, ಅಲ್ಲಿ ನಿತ್ಯ ಪೂಜೆ ನಡೆಯುವಂತೆ ಮಾಡಿದ್ದರು. ಸುತ್ತಲಿನ 10ಕ್ಕೂ ಹೆಚ್ಚು ಗ್ರಾಮಗಳನ್ನು ದತ್ತು ಪಡೆದು, ಪ್ರಾಥಮಿಕ ಸೌಲಭ್ಯಗಳನ್ನು ಕಲ್ಪಿಸಿದ್ದರು. ಸಹಸ್ರಮಾನದ ಮಸ್ತಕಾಭಿಷೇಕದಲ್ಲಿ ಸಾವಿರ ಮಂದಿಗೆ ಉಚಿತ ನೇತ್ರ ತಪಾಸಣೆ ಶಿಬಿರ ನಡೆಸಿದ್ದರು. ಆರೋಗ್ಯ, ಶಿಕ್ಷಣಕ್ಕೆ ಮಹತ್ವ ನೀಡುತ್ತಿದ್ದ ಸ್ವಾಮೀಜಿ, ಪಾಲಿಟೆಕ್ನಿಕ್, ಎಂಜಿನಿಯರಿಂಗ್, ನರ್ಸಿಂಗ್ ಕಾಲೇಜು, ಗೊಮ್ಮಟೇಶ್ ವಿದ್ಯಾಪೀಠ, ಪಾಕೃತ ಭಾಷೆಯ ಅಭಿವೃದ್ಧಿಗೆ ಬೆಂಗಳೂರಿನಲ್ಲಿ ಪ್ರಾಕೃತ ಜ್ಞಾನ ಭಾರತ ಟ್ರಸ್ಟ್ ಸ್ಥಾಪಿಸಿದ್ದರು.
ಶ್ರವಣಬೆಳಗೊಳದಲ್ಲಿ ರಾಷ್ಟ್ರೀಯ ಪ್ರಾಕೃತ ಅಧ್ಯಯನ –ಸಂಶೋಧನಾ ಸಂಸ್ಥೆಯಲ್ಲಿ ತಾಳೆಗರಿಗಳನ್ನು ಸಂರಕ್ಷಿಸುವ ಹಾಗೂ ಪ್ರಾಕೃತ ಗ್ರಂಥಗಳ ಕನ್ನಡ ಅನುವಾದ ಯೋಜನೆಯನ್ನು ರೂಪಿಸಿದ್ದರು. ಆಯುರ್ವೇದ ಆಸ್ಪತ್ರೆ, ಸಂಚಾರಿ ಆಸ್ಪತ್ರೆ, ಕ್ಲಿನಿಕಲ್ ಲ್ಯಾಬ್‌ಗಳನ್ನು ಸ್ಥಾಪಿಸಿದ ಸ್ವಾಮೀಜಿ, ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಉಳಿದ ಹಣದಿಂದ ಆಧುನಿಕ ಮಕ್ಕಳ ಆಸ್ಪತ್ರೆ ನಿರ್ಮಿಸಿದ್ದರು. 1981, 1993, 2006 ಹಾಗೂ 2018 ರಲ್ಲಿ ನಡೆದ ಮಹಾಮಸ್ತಕಾಭಿಷೇಕವನ್ನು ಯಶಸ್ವಿಯಾಗಿ ನೆರವೇರಿಸಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment